ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿಪುಲ್ ಬನ್ಸಾಲ್ ಸಭೆ
ಪ್ರವಾಹದಿಂದ ಜೀವಹಾನಿ ಆಗದಂತೆ ಮುನ್ನೆಚ್ಚರಿಕೆಗೆ ಸೂಚನೆ
ಬೆಳಗಾವಿ,
ಜಿಲ್ಲೆಯ ಪ್ರತಿಯೊಬ್ಬ ತಹಶೀಲ್ದಾರರು ತಮ್ಮ ವ್ಯಾಪ್ತಿಯಲ್ಲಿರುವ ಕಾಳಜಿ ಕೇಂದ್ರಗಳಿಗೆ ಕಡ್ಡಾಯವಾಗಿ ಭೇಟಿ ನೀಡಬೇಕು; ಯಾವುದೇ ಕಾರಣಕ್ಕೂ ಜನರು ಮತ್ತು ಜಾನುವಾರುಗಳ ಪ್ರಾಣಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಕಾಳಜಿ ಕೇಂದ್ರಗಳಲ್ಲಿ ಊಟೋಪಹಾರ, ಔಷಧ ಸಾಮಗ್ರಿಗಳ ಕೊರತೆಯಾಗದಂತೆ ಮುನ್ನಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿಪುಲ್ ಬನ್ಸಾಲ್ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಹಾಗೂ ಪ್ರವಾಹ ನಿರ್ವಹಣೆ ಕುರಿತು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ(ಜು.31) ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಆಗಸ್ಟ್ ನಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿರುತ್ತವೆ. ಆದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲ ಕಾಳಜಿ ಕೇಂದ್ರಗಳಲ್ಲಿ ಅಗತ್ಯ ಆಹಾರ ಸಾಮಗ್ರಿ, ಔಷಧ ಮತ್ತು ನೀರು ಮತ್ತಿತರ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು. ಜಾನುವಾರು ಶಿಬಿರಗಳಲ್ಲಿ ಮೇವು ದಾಸ್ತಾನು ಇಟ್ಟುಕೊಳ್ಳಬೇಕು.
2019 ರಲ್ಲಿ ಉದ್ಭವಿಸಿದ್ದ ಸಮಸ್ಯೆಗಳನ್ನು ತಿಳಿದುಕೊಂಡು ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಎಲ್ಲ ಉಪ ವಿಭಾಗಾಧಿಕಾರಿಗಳು ಮತ್ತು ತಹಶೀಲ್ದಾರರಿಗೆ ನಿರ್ದೇಶನ ನೀಡಿದರು.
ಪೊಲೀಸ್ ಆಯುಕ್ತರಾದ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಡಿಸಿಪಿ ರೋಹನ್ ಜಗದೀಶ್, ಪ್ರೊಬೇಷನರಿ ಐ.ಎ..ಎಸ್. ಅಧಿಕಾರಿ ದಿನೇಶ್ ಕುಮಾರ್ ಮೀನಾ ಉಪಸ್ಥಿತರಿದ್ದರು.
ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಮಹಾಂತೇಶ ಮುರಗೋಡ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.
ಜಿಲ್ಲೆಯ ಎಲ್ಲ ತಹಶೀಲ್ದಾರರು ವಿಡಿಯೋ ಸಂವಾದದ ಮೂಲಕ ಹಾಜರಾಗಿದ್ದರು.