ಸಮಗ್ರ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಕೈ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ
- ಕುಡಚಿ ಮತಕ್ಷೇತ್ರದ ಕುಡಚಿ ಗ್ರಾಮೀಣ ಹಾಗೂ ಆಲಖನೂರ ಜಿಪಂ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭ
ಬೆಳಗಾವಿ: ಚಿಕ್ಕೋಡಿ ಲೋಕಸಭೆಯ ಸಮಗ್ರ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕು ಎಂದು ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಮತದಾರರಲ್ಲಿ ಮನವಿ ಮಾಡಿದರು.
ರಾಯಬಾಗ ತಾಲೂಕಿನ ಕುಡಚಿ ಮತಕ್ಷೇತ್ರದ ಕುಡಚಿ ಗ್ರಾಮೀಣ ಹಾಗೂ ಆಲಖನೂರ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮತಯಾಚಿಸಿ, ಮಾತನಾಡಿದ ಅವರು, ಚಿಕ್ಕೋಡಿ ಲೋಕಸಭೆ ಕ್ಷೇತ್ರವನ್ನು ಅಭಿವೃದ್ಧಿಗೊಳಿಸುವುದೇ ನನ್ನ ಕನಸಾಗಿದೆ ಎಂದು ತಿಳಿಸಿದರು.

ವಿಧಾನಸಭೆ ಚುನಾವಣೆಯಲ್ಲಿ ಕುಡಚಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಮತಗಳನ್ನು ನೀಡಿದ್ದೀರಿ. ಅದೇ ರೀತಿ ಲೋಕಸಭೆ ಚುನಾವಣೆಯಲ್ಲಿಯೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ನನಗೆ ಹೆಚ್ಚಿನ ಮತಗಳನ್ನು ನೀಡಿ ಬಹು ಅಂತರದಿಂದ ಗೆಲ್ಲಿಸಬೇಕು. ಕಾಂಗ್ರೆಸ್ ಎಲ್ಲಾ ಸಮುದಾಯದ ಹಿತವನ್ನು ಬಯಸಿದೆ, ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆಯುವ ಮೂಲಕ ಜನರ ಮನಸ್ಸು ಗೆದ್ದಿದೆ. ಹೀಗಾಗಿ ಮುಂಬರುವ ಚಿಕ್ಕೋಡಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ನಿಮ್ಮ ಮಗಳನ್ನು ಗೆಲ್ಲಿಸಿ ಆಶೀರ್ವದಿಸಬೇಕು ಎಂದು ಮನವಿ ಮಾಡಿದರು.

ಕಳೆದ ಹಲವಾರು ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಸಾಮಾಜಿಕ, ಶೈಕ್ಷಣಿಕ ಪ್ರಗತಿಗಾಗಿ ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಸರ್ವ ಸಮಾಜದ ಅಭಿವೃದ್ಧಿಗೆ ಶ್ರಮಿಸುತ್ತಿದೇನೆ. ಇನ್ನು ಎಸ್‌ಎಸ್ಎಲ್‌ಸಿ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಬೆಳಗಾವಿ ಜಿಲ್ಲೆಯ 58 ಸಾವಿರ ವಿದ್ಯಾರ್ಥಿಗಳಿಗೆ “ಗೆಲುವಿನತ್ತ ನಮ್ಮ ಪಯಣ” ಎಂಬ ಪರೀಕ್ಷೆಗೆ ಅನುಕೂಲವಾಗುವ ಕೈಪಿಡಿಗಳನ್ನು ವಿತರಿಸಿದ್ದೇವೆ ಎಂದರು.

ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಆಯ್ಕೆಯಾಗಲು ಕುಡಚಿ ಮತಕ್ಷೇತ್ರದಿಂದಲೂ ಹೆಚ್ಚಿನ ಮತಗಳನ್ನು ನೀಡುವ ಮೂಲಕ ಆಶೀರ್ವದಿಸಿ, ನಿಮ್ಮ ಭಾಗದ, ನಿಮ್ಮ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತೇನೆಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮಕ್ಕೆ ಆಗಮಿಸಿದ ಚಿಕ್ಕೋಡಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರಿಗೆ ಮಹಿಳೆಯರು ಹೂ ಮಾಲೆ ಹಾಕು ಮೂಲಕ ಅದ್ದೂರಿ ಸ್ವಾಗತ ಕೋರಿದರು. ಈ ವೇಳೆ ಕುಡಚಿ ಶಾಸಕ ಮಹೇಂದ್ರ ತಮ್ಮನ್ನವರ್, ಕಾಂಗ್ರೆಸ್ ಮುಖಂಡರಾದ ಅಮೀತ್ ಘಾಟಗೆ, ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ಕಲ್ಪನಾ ಜೋಶಿ ಸೇರಿದಂತೆ ಮುಸ್ಲಿಂ ಸಮಾಜದ ಮುಖಂಡರು, ಅಪಾರ ಸಂಖ್ಯೆಯ ಕಾರ್ಯಕರ್ತರು, ಮಹಿಳೆಯರು, ಯುವಕರು ಇದ್ದರು.