ಕೊಯ್ನಾ ಡ್ಯಾಮ್ ನಿಂದ ಕೃಷ್ಣಾ ನದಿಗೆ ನೀರು ಬಿಡಲು ಮಹಾ ಸಿಎಂ ಏಕನಾಥ ಸಿಂಧೆ ಸ್ಪಂದನೆ: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ಕೃಷ್ಣಾ ನದಿಗೆ ಕೊಯ್ನಾ ಡ್ಯಾಮ್ ನಿಂದ ಶೀಘ್ರವೇ ನೀರು ಬಿಡಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಸಿಂಧೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿದ ಅವರು, ಕೊಯ್ನಾ ಡ್ಯಾಮ್ ನಿಂದ ಕೃಷ್ಣಾ ನದಿಗೆ ನೀರು ಬಿಡಲು ಈಚೆಗೆ ಸಿಎಂ ಸಿದ್ದರಾಮಯ್ಯನವರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಸಿಂಧೆ ಅವರಿಗೆ ಪತ್ರ ಬರೆದಿದ್ದರು. ಸಿಎಂ ಸಿದ್ದರಾಮಯ್ಯನವರ ಪತ್ರಕ್ಕೆ ಸ್ಪಂದಿಸಿ ನೀರು ಬಿಡಲು ಒಪ್ಪಿಗೆ ನೀಡಿದ ಮಹಾರಾಷ್ಟ್ರ ಸಿಎಂ ಏಕನಾಥ ಸಿಂಧೆ ಅವರಿಗೆ ರಾಜ್ಯದ ಜನತೆ ಪರವಾಗಿ ಧನ್ಯವಾದ ತಿಳಿಸಿದ್ದಾರೆ.

ಕಳೆದ ಒಂದು ವಾರದಿಂದ ಮಳೆಯೂ ಸುರಿಯುತ್ತಿದ್ದು, ಕೊಯ್ನಾ ಜಲಾಶಯದಿಂದ ಮಹಾರಾಷ್ಟ್ರ ಸರ್ಕಾರ ನೀರು ಬಿಟ್ಟ ನಂತರ ಸಾರ್ವಜನಿಕರು ನೀರನ್ನು ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.